ಚಿಕ್ಕೋಡಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಗೃಹಜ್ಯೋತಿ ಹೆಸರಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು. ನಿಮ್ಮ ವಿದ್ಯುತ್ ಬಿಲ್ ಗೆ ಇನ್ನೂ ಕಾಂಗ್ರೆಸ್ ಜವಾಬ್ದಾರಿ. ಇದಕ್ಕೆ ಕಾಂಗ್ರೆಸ್ ಗ್ಯಾರಂಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲಿದೆ. ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶವಾಗಿದೆ ಎಂದರು.

ಮಹಾತ್ಮಾ ಗಾಂಧೀಜಿ ಅವರು 1924 ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟಿಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು.

ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆ ಆರಂಭ‌ ಮಾಡಿದ್ದೆವೆ. ಆರಂಭ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ ಪ್ರತಿಜ್ಞೆ ಮಾಡುತ್ತಿರುವ ಘಳಿಗೆ ಎಂದರು.