ಗದಗ: ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸ್ವೀಕರಿಸಿದ ಅರ್ಜಿಗಳ ಪೈಕಿ ಶೇ. 95ರಷ್ಟು ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ಟೆಂಬರ್ 30ರಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಜನತಾ ದರ್ಶನದಲ್ಲಿ ಒಟ್ಟು 922 ಅರ್ಜಿಗಳು ಸ್ವೀಕೃತವಾಗಿದ್ದವು. ಬಹುತೇಕ ಅರ್ಜಿಗಳನ್ನು ವಿಲೇವಾರಿ ಮಾಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದರು.

ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಕೆಲ ಅರ್ಜಿದಾರರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಹಿಂಬರಹ ನೀಡಲಾಗಿದೆ. ಆ ಅರ್ಜಿಗಳನ್ನು ಸಹ ಹತ್ತು ದಿನಗಳ ಒಳಗಾಗಿ ಪಡೆದು, ಅಂಥ ಸಮಸ್ಯೆಗಳಿಗೂ ಪರಿಹಾರ ನೀಡಲಾಗುವುದು ಎಂದರು.

ನಿಗದಿತ ಸಮಯದಲ್ಲಿ ಹಿಂಬರಹ ನೀಡದಿದ್ದರೂ ಅಂಥ ಅರ್ಜಿಗಳ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆ ಕೂಲಂಕುಷವಾಗಿ ಚರ್ಚೆ ನಡೆಸುವ ಮೂಲಕ ಎಲ್ಲ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.