ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾದ ಕನ್ನಡವನ್ನು ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಕರ್ನಾಟಕ ಸರ್ಕಾರವು ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಹೊರಡಿಸಿರುವ ಈ ಸುತ್ತೋಲೆಯಲ್ಲಿ, ಕನ್ನಡ ಭಾಷಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ಅಧಿಕಾರಿಗಳು ಮತ್ತು ನೌಕರರಿಗೆ ಸೂಚನೆ ನೀಡಲಾಗಿದೆ. ಈ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಕನ್ನಡ ಬಳಕೆ ಕಡ್ಡಾಯ ಏಕೆ?
- ಆಡಳಿತ ಭಾಷೆ ಕನ್ನಡ: ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರ ಪ್ರಕಾರ, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿದೆ.
- ಕನ್ನಡದಲ್ಲಿಯೇ ಪ್ರತಿಕ್ರಿಯೆ: ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು.
- ನಾಮಫಲಕಗಳು ಮತ್ತು ಪತ್ರ ವ್ಯವಹಾರ: ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು.
- ಸರ್ಕಾರಿ ಆದೇಶಗಳು: ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಸೇರಿದಂತೆ ಎಲ್ಲಾ ಸರ್ಕಾರಿ ಆದೇಶಗಳನ್ನು ಕನ್ನಡದಲ್ಲಿಯೇ ಹೊರಡಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ.
- ಆಂತರಿಕ ಪತ್ರ ವ್ಯವಹಾರ ಮತ್ತು ಕಡತ: ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿಗಳು ಕನ್ನಡದಲ್ಲಿಯೇ ಇರಬೇಕು.
- ಸಭೆಗಳ ದಾಖಲೆಗಳು: ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡವಳಿಗಳನ್ನು ಕನ್ನಡದಲ್ಲಿಯೇ ತಯಾರಿಸಬೇಕು.
- ಇತರೆ ಪತ್ರ ವ್ಯವಹಾರ: ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು.
ಮುಖ್ಯಮಂತ್ರಿಗಳ ಸೂಚನೆ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವರದಿ:
ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ, ಇದು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದಿರುವುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದಾರೆ.
ಕನ್ನಡದಲ್ಲಿ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೆ.ಡಿ.ಪಿ. ಸಭೆಯ ಕಾರ್ಯಸೂಚಿಯನ್ನು ಆಂಗ್ಲ ಭಾಷೆಯಲ್ಲಿ ಹೊರಡಿಸಿರುವುದು ಹಾಗೂ ವಿಶೇಷವಾಗಿ ಕಾಮಗಾರಿ ಇಲಾಖೆಗಳು ತಮ್ಮೆಲ್ಲ ಮಾಹಿತಿಗಳನ್ನು ಆಂಗ್ಲ ಭಾಷೆಯಲ್ಲಿ ಮಂಡಿಸುತ್ತಿರುವುದು ಮತ್ತು ಇದನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅನುಮೋದಿಸುತ್ತಿದ್ದಾರೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿಯೇ ಆಡಳಿತ ನಡೆಸುವ ಬಗ್ಗೆ ಹಲವಾರು ಬಾರಿ ಸೂಚನೆಗಳನ್ನು ನೀಡಿ ಸುತ್ತೋಲೆಗಳನ್ನು ಹೊರಡಿಸಿದ್ದರೂ ಸಹ ಪಾಲನೆಯಾಗದೇ ಇರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ ಮಾಡುತ್ತಲೇ ಬಂದಿದೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:
ಆದುದರಿಂದ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ಮತ್ತೊಮ್ಮೆ ಪುನರುಚ್ಚರಿಸಲಾಗಿದೆ. ಈ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.