ಗದಗ: ಜಿಲ್ಲೆಯ ಹರ್ತಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ವಾಸವಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ತಂಗಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸೂಕ್ತ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸಿಸುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಇಬ್ಬರನ್ನು ಮುಂದಿನ ಕಾನೂನು ಪ್ರಕ್ರಿಯೆಗಾಗಿ ಹೋಲ್ಡಿಂಗ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಬಾಂಗ್ಲಾದೇಶಕ್ಕೆ ಗಡೀಪಾರು ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹರ್ತಿ ಗ್ರಾಮದಲ್ಲಿ ಅಕ್ರಮ ವಲಸಿಗರು ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದ್ದು, ಅಕ್ರಮವಾಗಿ ವಾಸಿಸುತ್ತಿರುವವರ ಕುರಿತು ಅಧಿಕಾರಿಗಳು ಮತ್ತಷ್ಟು ಪರಿಶೀಲನೆ ನಡೆಸುವ ಸಾಧ್ಯತೆ ಇದೆ.