ಬೆಳಗಾವಿ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 29ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಕೆ.ಎಂ. ಜಾನಕಿ ತಿಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತಗಳ ಎಣಿಕೆ ನಡೆಯಲಿದೆ. ಅಕ್ಟೋಬರ್ 31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಚುನಾವಣೆಯನ್ನು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಚುನಾವಣಾ ವ್ಯಾಪ್ತಿಯ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸೇರಿದಂತೆ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಕೆ.ಎಂ. ಜಾನಕಿ ತಿಳಿಸಿದ್ದಾರೆ.