ಬೀದರ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಬೀದರ್‌ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳ ಮೀಸಲಾತಿ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಮೀಸಲಾತಿ ಪ್ರಕ್ರಿಯೆಯೂ ಮುಗಿದಿದ್ದು, ಕರಡು ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.
ಸದ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಕರಡು ಅಧಿಸೂಚನೆ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಕೋರಲಾಗಿದೆ. ಅನುಮತಿ ದೊರೆತ ಕೂಡಲೇ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಕರಡು ಅಧಿಸೂಚನೆ ಪ್ರಕಟಿಸಿದ ಬಳಿಕ ನಿಯಮಾನುಸಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗುತ್ತದೆ. ಆಕ್ಷೇಪಣೆಗಳ ಪರಿಶೀಲನೆ ಹಾಗೂ ಇತರ ಪ್ರಕ್ರಿಯೆ ಪೂರ್ಣಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಬಳಿಕ ಉಚ್ಚ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ, ರಾಜ್ಯ ಚುನಾವಣಾ ಆಯೋಗಕ್ಕೆ ಚುನಾವಣೆ ನಡೆಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.