ಕಲಬುರಗಿ: ನಗರದ ಪೂಜಾರಿ ಚೌಕ್ ಬಳಿ ಎಸ್‌ಬಿಐ ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಹರಿಯಾಣ ಮೂಲದ ತಸ್ಲೀಮ್ @ ತಸ್ಸಿ (28) ಮತ್ತು ಶರೀಫ್ (22) ಎಂಬ ದರೋಡೆಕೋರರು ಪೊಲೀಸರ ಗುಂಡಿನಿಂದ ಗಾಯಗೊಂಡಿದ್ದಾರೆ.

ಕಲಬುರಗಿಯ ಹೊರವಲಯದ ಬೇಲೂರ ಕ್ರಾಸ್ ಇಂಡಸ್ಟ್ರಿಯಲ್ ಏರಿಯಾ ಬಳಿ ಆರೋಪಿಗಳನ್ನು ಬಂಧಿಸಲು ತೆರಳಿದಾಗ ಈ ಘಟನೆ ನಡೆದಿದೆ.

ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ, ಆತ್ಮರಕ್ಷಣೆಗಾಗಿ ಪಿಎಸ್‌ಐ ಬಸವರಾಜ್ ಅವರು ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಮಂಜು, ಫಿರೋಜ್ ಮತ್ತು ರಾಜಕುಮಾರ್ ಅವರಿಗೂ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಏಪ್ರಿಲ್ 9 ರಂದು ಪೂಜಾರಿ ಚೌಕ್ ಬಳಿಯ ಎಸ್‌ಬಿಐ ಎಟಿಎಂ ಅನ್ನು ದರೋಡೆ ಮಾಡಿದ್ದ ಈ ಆರೋಪಿಗಳು, ಸುಮಾರು 18 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಹೋಗಿದ್ದರು. ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣ ಸ್ಪ್ರೇ ಮಾಡಿ, ಗ್ಯಾಸ್ ಕಟ್ಟರ್ ಬಳಸಿ ಎಟಿಎಂ ಯಂತ್ರವನ್ನು ಕತ್ತರಿಸಿ ಹಣವನ್ನು ಕದ್ದೊಯ್ದಿದ್ದರು. ಈ ಪ್ರಕರಣದ ಕುರಿತು ತನಿಖೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.