ತುಮಕೂರು: ಭ್ರಷ್ಟಾಚಾರ ನಿಗ್ರಹ ದಳವಾದ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ (MD) ರಾಜಶೇಖರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ತುಮಕೂರಿನ ಅಶೋಕ ನಗರದ ಎಸ್.ಐ.ಟಿ ಬಡಾವಣೆಯ ನಾಲ್ಕನೇ ಕ್ರಾಸ್‌ನಲ್ಲಿರುವ ರಾಜಶೇಖರ್ ಅವರ ಸಹೋದರನ ಮನೆಗೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸುಮಾರು 10 ಜನ ಅಧಿಕಾರಿಗಳ ತಂಡವು ಏಕಕಾಲಕ್ಕೆ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ ಎಂದು ತಿಳಿದುಬಂದಿದೆ.
ಕೇವಲ ರಾಜಶೇಖರ್ ಅವರ ಮನೆ ಮಾತ್ರವಲ್ಲದೆ, ಅವರಿಗೆ ಸಂಬಂಧಿಸಿದ ರಾಜ್ಯದಾದ್ಯಂತ ಸುಮಾರು 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಜಶೇಖರ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಬೆಳ್ಳಂಬೆಳಗ್ಗೆ ನಡೆದ ಈ ದಿಢೀರ್ ದಾಳಿಯಿಂದಾಗಿ ತುಮಕೂರಿನಲ್ಲಿ ಸಂಚಲನ ಮೂಡಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದು, ಈ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.