ಬಳ್ಳಾರಿ: ಲೋಕಸಭಾ ಚುನಾವಣೆ ಮುನ್ನವೇ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ದಿಢೀರ್ ದಾಳಿ.

ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜಿಲ್ಲೆಯ ಪ್ರಭಾವಿ ಶಾಸಕರು ಮತ್ತು ಸಂಸದರ ನಿವಾಸಗಳ ಮೇಲೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಬಳ್ಳಾರಿ ರಾಜಕೀಯದಲ್ಲಿ ಭಾರೀ ಕಂಪನ ಸೃಷ್ಟಿಸಿದೆ.

ಸಂಸದ ವೈ. ದೇವೇಂದ್ರಪ್ಪ ಅವರ ಸಂಡೂರು ನಿವಾಸ, ಕಂಪ್ಲಿ ಶಾಸಕ ಜೆ. ಎನ್. ಗಣೇಶ್ ಅವರ ನಿವಾಸ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ನಿವಾಸ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಅಧಿಕಾರಿಗಳ ಈ ಏಕಕಾಲಿಕ ದಾಳಿಯು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಪ್ರಾಥಮಿಕವಾಗಿ ಊಹಿಸಲಾಗುತ್ತಿದೆ.