ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಎದುರಾಗಿರುವ ತಾಂತ್ರಿಕ ಅಡೆತಡೆಗಳನ್ನು ಕೂಡಲೇ ನಿವಾರಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಗದಗ ಜಿಲ್ಲೆಯ ‘ಗ್ಯಾರಂಟಿ’ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

650 ಅರ್ಹರಿಗೆ ತಕ್ಷಣ ಸೌಲಭ್ಯ
ಗದಗ ಜಿಲ್ಲೆಯಲ್ಲಿ ಆದಾಯ ತೆರಿಗೆ (IT) ಮತ್ತು ಜಿಎಸ್‌ಟಿ (GST) ಪಾವತಿದಾರರ ಸಂಖ್ಯೆ ಒಟ್ಟು 2,543 ಇದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ಪೈಕಿ ತಾವು ತೆರಿಗೆ ಪಾವತಿದಾರರಲ್ಲ ಎಂಬ ದಾಖಲೆಗಳನ್ನು ಈಗಾಗಲೇ ಸಲ್ಲಿಸಿರುವ 650 ಫಲಾನುಭವಿಗಳಿಗೆ ತಕ್ಷಣವೇ ಯೋಜನೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದರು.

ರೇಷನ್ ಕಾರ್ಡ್ ಸಮಸ್ಯೆ ಇತ್ಯರ್ಥಕ್ಕೆ ಆದೇಶ
ಕುಟುಂಬದ ಯಜಮಾನಿ ಮರಣ ಹೊಂದಿದ ಸಂದರ್ಭದಲ್ಲಿ ರೇಷನ್ ಕಾರ್ಡ್ ನವೀಕರಣ ಮತ್ತು ಹೆಸರು ಬದಲಾವಣೆಯಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿವೆ. ಇದನ್ನು ತ್ವರಿತವಾಗಿ ಸರಿಪಡಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯು ಬಡ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ಶಕ್ತಿಯಾಗಿದೆ. ಅರ್ಹರಿಗೆ ಈ ಸೌಲಭ್ಯ ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ಪ್ರದರ್ಶಿಸಬೇಕು.
-ಡಾ. ಎಚ್.ಕೆ. ಪಾಟೀಲ್, ಸಚಿವರು

ಸಭೆಯಲ್ಲಿ ಗದಗ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಯೋಜನೆಯ ಅನುಷ್ಠಾನದಲ್ಲಿರುವ ಪ್ರಾಯೋಗಿಕ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯ ದಯಾನಂದ ಪವಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕಿಯರಾದ ಅನಿತಾ ಲಕ್ಷ್ಮಿ, ರೋಜಲೀನ್, ಉಪನಿರ್ದೇಶಕಿ ಪದ್ಮಾವತಿ ಜಿ. ಹಾಗೂ ಗದಗ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.