ಕಿತ್ತೂರು: ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಕಾರ್ಯಾದೇಶ ನೀಡುವ ಹಂತದಲ್ಲಿದ್ದು, ನವೆಂಬರ್ ತಿಂಗಳಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸೋಮವಾರ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ಕೋಟೆಯ ಪಕ್ಕದಲ್ಲಿ 115 ಕೋಟಿ ರೂ. ವೆಚ್ಚದಲ್ಲಿ ಅರಮನೆ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.
ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಕರಣ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ಮತ್ತೆ ಪ್ರಾರಂಭವಾಗಿದ್ದು ಶೀಘ್ರವೇ ಇತ್ಯರ್ಥವಾಗುವ ನಿರೀಕ್ಷೆ ಇದೆ. ಕಳಸಾ ಬಂಡೂರಿ ಯೋಜನೆಗೆ ವಿವಿಧ ತೀರುವಳಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಶೀಘ್ರವೇ ಈ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಾರಂಭಿಸುವ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದರು.